Monday, 23 November 2020

ನಿಸಾನ್ ಚಂಡಮಾರುತ: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ


 ನಿಸಾನ್ ಚಂಡಮಾರುತ: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು,ನ.24- ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡಿನ ಕರಾವಳಿಯತ್ತ ಧಾವಿಸುತ್ತಿರುವ ನಿವಾರ್ ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದಲ್ಲೂ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ನಾಳೆಯಿಂದ 2 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಪುದುಚೇರಿ ಮತ್ತು ತಮಿಳುನಾಡಿನ ಸಮುದ್ರ ತೀರದ ಊರುಗಳಲ್ಲಿ ನಿವಾರ್ ಚಂಡಮಾರುತದಿಂದ ಭೂಕುಸಿತವೂ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ನಿವಾರ್ ಚಂಡಮಾರುತದ ಪರಿಣಾಮದಿಂದ ಇಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನ.25 ಮತ್ತು 26ರಂದು ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಎರಡೂ ದಿನ ಈ ಭಾಗಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದ್ದಾರೆ.

ಬಂಗಾಲ ಉಪಸಾಗರ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ನಾಳೆ ತಮಿಳುನಾಡು ಹಾಗೂ ಪಾಂಡಿಚೇರಿ ಕರಾವಳಿಯಲ್ಲಿ ದಾಟಿ ಕಾರೈಕಲ್, ಮಾಮಲಪುರಂ ಹತ್ತಿರ ಸೈಕ್ಲೋನ್ ದಾಟಲಿದ್ದು,

ಇದರ ಪ್ರಭಾವದಿಂದಾಗಿ ಕರಾವಳಿಯ ಕೆಲ ಭಾಗದಲ್ಲಿ ನ.25, 26, 27 ರಂದು ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ನ. 23ರಂದು ಒಣ ಹವೆ ಇರಲಿದ್ದು, ನ. 24 ರಿಂದ 27 ರವರೆಗೆ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನಲ್ಲಿ ನ.24 ರಂದು ಕೆಲವು ಕಡೆ ಮಳೆಯಾಗುವ ಸಾಧ್ಯತೆಗಳಿದ್ದು, ನ.25 ರಿಂದ 27ರವರೆಗೆ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಲಿದೆ. ಕೋಲಾರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಮಾನ ಇಲಾಖೆ ತಜ್ಞ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ತೀವ್ರ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ರಾತ್ರಿ ಕೂಡ ಮಳೆ ಸುರಿಯಬಹುದು. ಇನ್ನು ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೂಡ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ನವೆಂಬರ್ 25ರಂದು ತಮಿಳುನಾಡಿನ ಕಾರೈಕಾಲ್ ಮತ್ತು ಮಾಮಲ್ಲಪುರಂ ನಡುವೆ ವಾಯುವ್ಯ ದಿಕ್ಕಿನಲ್ಲಿ ಚಲಿಸಲಿದೆ. ಮುಂದೆ ತಮಿಳುನಾಡು ಮತ್ತು ಪುದುಚೇರಿ ಕರಾವಳಿಗಳನ್ನು ದಾಟುವ ನಿರೀಕ್ಷೆಯಿದೆ. ಭಾರತದ ಪೂರ್ವ ಕರಾವಳಿಯನ್ನು ತಲುಪುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ತಮಿಳುನಾಡು ಮತ್ತು ಈಶಾನ್ಯ ಶ್ರೀಲಂಕಾಗಳಲ್ಲೂ ವಾಯುಭಾರ ಕುಸಿತವಾಗಲಿದೆ ಎಂದು ಎಚ್ಚರಿಕೆ ನೀಡಿದೆ.

ರಾಯಲಸೀಮಾ, ತೆಲಂಗಾಣ, ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕರಾವಳಿ ಆಂಧ್ರಪ್ರದೇಶಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬುಧವಾರದವರೆಗೂ ಮೀನುಗಾರರು ಸಮುದ್ರಕ್ಕೆ ತೆರಳಿದಂತೆ ಸೂಚಿಸಲಾಗಿದೆ.SHARE THIS

Author:

0 التعليقات: