Sunday, 20 December 2020

ಕಾಯ್ದೆ ತಿದ್ದುಪಡಿಗೆ ಸಿದ್ಧ; ವಾಪಸ್ ಸಾಧ್ಯವಿಲ್ಲ: ಕೇಂದ್ರ ಸಚಿವ ರಾಮದಾಸ್ ಅಠಾವಳೆ


 ಕಾಯ್ದೆ ತಿದ್ದುಪಡಿಗೆ ಸಿದ್ಧ; ವಾಪಸ್ ಸಾಧ್ಯವಿಲ್ಲ: ಕೇಂದ್ರ ಸಚಿವ ರಾಮದಾಸ್ ಅಠಾವಳೆ

ಬೆಂಗಳೂರು: ಹೊಸದಾಗಿ ಜಾರಿಗೊಳಿಸಿರುವ ಕೃಷಿ ಸಂಬಂಧಿ ಕಾಯ್ದೆಗಳ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ಕಾಯ್ದೆಗಳನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ‌ ಹೇಳಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳ ತಿದ್ದುಪಡಿಯಿಂದ ರೈತರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ತಿದ್ದುಪಡಿಗಳಿಂದ ರೈತರಿಗೆ ಅನುಕೂಲ ಆಗಲಿದೆ' ಎಂದರು.

ಪ್ರತಿಭಟನೆ ನಡೆಸುತ್ತಿರುವ ರೈತರ ಜತೆ ಮತ್ತೊಮ್ಮೆ ಚರ್ಚೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ. ಚರ್ಚೆಯ ಬಳಿಕ ತಿದ್ದುಪಡಿ ಕುರಿತು ನಿರ್ಧಾರಕ್ಕೆ ಬರಲಾಗುವುದು. ರೈತರ ಪ್ರತಿಭಟನೆ ಈಗ ರಾಜಕೀಯ ತಿರುವು ಪಡೆದುಕೊಂಡಿದೆ ಎಂದರು.

ಪಶ್ಚಿಮ ಬಂಗಾಳ ರಾಜ್ಯವನ್ನು ತೃಣಮೂಲ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿಯವರು ಹಾಳು ಮಾಡಿದ್ದಾರೆ. ಬಂಗಾಳ ಕಂಗಾಲಾಗಿದೆ. ಅಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಆ ಬಳಿಕ ಪಶ್ಚಿಮ ಬಂಗಾಳದಲ್ಲಿ ಅಭಿವೃದ್ಧಿ ಶಕೆ ಆರಂಭವಾಗಲಿದೆ ಎಂದು ಹೇಳಿದರು.

'ಕರ್ನಾಟಕದಲ್ಲಿ ಮರಾಠಾ ಸಮುದಾಯದ ಜನರು ದೊಡ್ಡ ಸಂಖ್ಯೆಯ ಜನರು ಇದ್ದಾರೆ. ಅವರ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಿರುವುದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ' ಎಂದರು.


SHARE THIS

Author:

0 التعليقات: