Thursday, 31 December 2020

ನಾಳೆಯೇ ಚುನಾವಣೆ ನಡೆದರೆ ಕಾಂಗ್ರೆಸ್ ಗೆಲುವು: ತಾಕತ್ತಿದ್ದರೆ ಬಿಜೆಪಿ ವಿಧಾನಸಭೆ ವಿಸರ್ಜಿಸಲಿ- ಸಿದ್ದರಾಮಯ್ಯ


ನಾಳೆಯೇ ಚುನಾವಣೆ ನಡೆದರೆ ಕಾಂಗ್ರೆಸ್ ಗೆಲುವು: ತಾಕತ್ತಿದ್ದರೆ ಬಿಜೆಪಿ ವಿಧಾನಸಭೆ ವಿಸರ್ಜಿಸಲಿ- ಸಿದ್ದರಾಮಯ್ಯ

ಬೆಂಗಳೂರು: ನಾಳೆಯೇ ಚುನಾವಣೆ ನಡೆದರೆ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದಾಗಿ ಹೇಳಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಆಡಳಿತಾರೂಢ ಬಿಜೆಪಿ ವಿಧಾನಸಭೆಯನ್ನು ವಿಸರ್ಜಿಸಿ, ಚುನಾವಣೆಯನ್ನು ಎದುರಿಸಲಿ ಎಂದು ಸವಾಲು ಹಾಕಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಹೆಚ್ಚಿನ ಕಾಲ ಇರಲ್ಲ ಎಂದು ಈ ಹಿಂದೆ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ, ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಯಡಿಯೂರಪ್ಪ ಹಗಲು ಗನಸು ಕಾಣುತ್ತಿದ್ದಾರೆ. ಒಂದು ವೇಳೆ ನಾಳೆಯೇ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್ ಗೆಲುವು ಸಾಧಿಸಿ, ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.

ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿರುವುದಾಗಿ ಹಲವು ಬಾರಿ ಹೇಳಿಕೆ ನೀಡಿದ್ದೇನೆ. ತನ್ನ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡಾ 60 ರಷ್ಟು ಅಭ್ಯರ್ಥಿಗಳು ಗೆಲುವು ಸಾಧಿಸಿರುವುದಾಗಿ ಮುಖ್ಯಮಂತ್ರಿ ಹೇಳಿಕೊಳ್ಳುತ್ತಿದ್ದಾರೆ, ಲಭ್ಯವಿರುವ ಮಾಹಿತಿ ಪ್ರಕಾರ, ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ ಸುಮಾರು 3,800 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದಾಗಿ ಯಡಿಯೂರಪ್ಪ ಹೇಳಿಕೆ ನೀಡಿದ್ದರು. ಆದರೆ, ಈ ಚುನಾವಣೆಯಲ್ಲಿ ಅನೇಕ ಕಡೆಗಳಲ್ಲಿ ಬಿಜೆಪಿಗೆ ಅಭ್ಯರ್ಥಿಗಳೇ ಇರಲಿಲ್ಲ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕ ಕಡೆಗಳಲ್ಲಿ ಗೆಲುವು ಸಾಧಿಸಿದೆ ಎಂದು ವಿಪಕ್ಷ ನಾಯಕ ನುಡಿದರು.

ಯುಡಿಯೂರಪ್ಪ ಸರ್ಕಾರದಲ್ಲಿ ವ್ಯಾಪಕ ಭ್ರಷ್ಟಾಚಾರವಾಗಿದ್ದು, ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ. ಆಡಳಿತ ವ್ಯವಸ್ಥೆ ಕುಸಿದಿದೆ. ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.SHARE THIS

Author:

0 التعليقات: