Sunday, 17 January 2021

ದೇಶದ ಏಕತೆಗೆ ಮಾರಕ: ಉದ್ಧವ್ ಠಾಕ್ರೆ ಮಾತಿಗೆ ಯಡಿಯೂರಪ್ಪ ಖಂಡನೆ


 ದೇಶದ ಏಕತೆಗೆ ಮಾರಕ: ಉದ್ಧವ್ ಠಾಕ್ರೆ ಮಾತಿಗೆ ಯಡಿಯೂರಪ್ಪ ಖಂಡನೆ

ಬೆಂಗಳೂರು: ಬೆಳಗಾವಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೀಡಿದ ಹೇಳಿಕೆಗೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದು, ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ ಎಂದು ಖಂಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದಿದ್ದಾರೆ.

ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ ಎಂದಿದ್ದಾರೆ.

ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಉದ್ಧವ್ ಠಾಕ್ರೆ ಅವರು ರವಿವಾರ ಟ್ವೀಟ್ ನಲ್ಲಿ”ಕರ್ನಾಟಕ ಆಕ್ರಮಿತ ಮರಾಠಿ ಭಾಷಿಕರು ಮತ್ತು ಸಾಂಸ್ಕೃತಿಕ ಪ್ರದೇಶ’ಗಳನ್ನು ವಶಪಡಿಸಿಕೊಳ್ಳುವುದಾಗಿ ಹೇಳಿದ್ದರು. ಕರ್ನಾಟಕದಲ್ಲಿರುವ ಮರಾಠಿ ಭಾಷಿಕರ ನೆಲಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿದಾಗ ಮಾತ್ರ ಹುತಾತ್ಮರಿಗೆ ನಿಜವಾದ ಗೌರವ ಸಲ್ಲಿಸಿದಂತೆ ಆಗುತ್ತದೆ. ಈ ವಿಚಾರದಲ್ಲಿ ನಾವು ಒಗ್ಗಟ್ಟಾಗಿದ್ದೇವೆ ಮತ್ತು ಬದ್ಧರಾಗಿದ್ದೇವೆ. ಈ ಭರವಸೆ ಈಡೇರಿಸುವ ಮೂಲಕ ಹುತಾತ್ಮರಿಗೆ ಗೌರವ ಸಲ್ಲಿಸುತ್ತೇವೆ ಎಂದಿದ್ದರು.


SHARE THIS

Author:

0 التعليقات: