Sunday, 18 April 2021

ನಿಘಂಟು ತಜ್ಞ, ಸಂಶೋಧಕ ಪದ್ಮಶ್ರೀ ಪ್ರೊ.ಜಿ.ವೆಂಕಟಸುಬ್ಬಯ್ಯ ನಿಧನ


 ನಿಘಂಟು ತಜ್ಞ, ಸಂಶೋಧಕ ಪದ್ಮಶ್ರೀ ಪ್ರೊ.ಜಿ.ವೆಂಕಟಸುಬ್ಬಯ್ಯ ನಿಧನ

ಬೆಂಗಳೂರು: ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ, ಶತಾಯುಷಿ ಪ್ರೊ.ಜಿ.ವೆಂಕಟಸುಬ್ಬಯ್ಯ ರವಿವಾರ ತಡರಾತ್ರಿ 1:15ರ ವೇಳೆ ನಿಧನರಾದರು. ಅವರಿಗೆ 108 ವರ್ಷ ವಯಸ್ಸಾಗಿತ್ತು.

 ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರೂ ಆಗಿದ್ದ ನಾಡೋಜ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸುವರ್ಣ ಪದಕದೊಡನೆ ಎಂ.ಎ. ಪದವಿ, ನಂತರ ಬಿ.ಟಿ. ಪದವಿ ಗಳಿಸಿದ್ದರು. ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿಯನ್ನು ಆರಂಭಿಸಿ, ನಂತರ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಿನ್ಸಿಪಾಲರಾಗಿ, ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆಗೆ ಪಾತ್ರರಾಗಿದ್ದಾರೆ.

ನಡೆದಾಡುವ ನಿಘಂಟು, ಶಬ್ದ ಬ್ರಹ್ಮ ಎಂದು ಜನಜನಿತರಾಗಿರುವ ಪ್ರೊ.ಜಿ.ವೆಂಕಟಸುಬ್ಬಯ್ಯ ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. 70 ಪುಸ್ತಕಗಳನ್ನು, 14 ನಿಘಂಟುಗಳನ್ನು ಪ್ರಕಟಗೊಳಿಸಿರುವುದಲ್ಲದೆ ‘ಇಗೋ ಕನ್ನಡ' ಎಂಬ ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದಾರೆ.

ನಿಘಂಟು ಪರಿವಾರ, ಅಕ್ರೂರ ಚರಿತ್ರೆ (ಸಂಪಾದನೆ), ಇಗೋ ಕನ್ನಡ (ಸಾಮಾಜಿಕ ನಿಘಂಟು), ಗತಿ ಪ್ರಜ್ಞೆ, ಕನ್ನಡವನ್ನು ಉಳಿಸಿ ಬೆಳೆಸಿದವರು, ಅನುಕಲ್ಪನೆ, ಕರ್ಣ ಕರ್ಣಾಮೃತ ಮುಂತಾದವು ಅವರ ಪ್ರಮುಖ ಕೃತಿಗಳು.

ಹಲವಾರು ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಆಹ್ವಾನಿತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ನಾಡೋಜ ಪ್ರೊ.ಜಿ.ವೆಂಕಟಸುಬ್ಬಯ್ಯರ ಪಾಂಡಿತ್ಯಕ್ಕೆ ಸಂದ ಪ್ರಶಸ್ತಿ ಪುರಸ್ಕಾರಗಳು ಹಲವಾರು. ಭಾಷೆಗೆ ನೀಡಿದ ಕೊಡುಗೆಗಾಗಿ ಅವರು ಪದ್ಮಶ್ರೀ ಪ್ರಶಸ್ತಿಗೂ ಭಾಜನರಾಗಿದ್ದರು. ವಿದ್ಯಾಲಂಕಾರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಂಬಾ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಕಾಯಕ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ವಿಶೇಷ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿ, ಅಂತರಾಷ್ಟ್ರೀಯ ನಿಘಂಟು ಸಮ್ಮೇಳನಗಳಿಗೆ ಆಹ್ವಾನ ಮುಂತಾದವು ಮುಖ್ಯವಾದವು.

ಜಯನಗರ 7ನೇ ಬ್ಲಾಕ್‌ನ ನಿವಾಸದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಚಾಮರಾಜಪೇಟೆಯ ಚಿತಾಗಾರದಲ್ಲಿ ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


SHARE THIS

Author:

0 التعليقات: