Saturday, 1 May 2021

ಇಂದು ಕರ್ನಾಟಕದ 3 ಕ್ಷೇತ್ರ ಸೇರಿ ಪಂಚ ರಾಜ್ಯ ಚುನಾವಣೆ ಫಲಿತಾಂಶ


ಇಂದು ಕರ್ನಾಟಕದ 3 ಕ್ಷೇತ್ರ ಸೇರಿ ಪಂಚ ರಾಜ್ಯ ಚುನಾವಣೆ ಫಲಿತಾಂಶ 

ನವದೆಹಲಿ : ಕರ್ನಾಟಕದ ಮೂರು ಕ್ಷೇತ್ರ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಸೋಲು-ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ.

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ಪೈಪೋಟಿ ಇದ್ದು, ಹಲವು ಚುನಾವಣೋತ್ತರ ಸಮೀಕ್ಷೆಗಳು ಮಮತಾ ಬ್ಯಾನರ್ಜಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲಿದ್ದಾರೆ ಎಂದು ಹೇಳಿವೆ.

ಕೇರಳ : ಕೇರಳದಲ್ಲಿ 140 ಕ್ಷೇತ್ರಗಳಿಗೆ 597 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಸಮೀಕ್ಷೆಗಳಲ್ಲಿ ಹಾಲಿ ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿಎಫ್ ಮತ್ತೆ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ತಮಿಳುನಾಡು : ತಮಿಳುನಾಡಿನ 234 ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಾಗೂ ಕನ್ಯಾಕುಮಾರಿ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಸಮೀಕ್ಷೆಗಳ ಪ್ರಕಾರ ಇಲ್ಲಿ ಡಿಎಂಕೆ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಹೇಳಿವೆ.

ಅಸ್ಸಾಂ : ಅಸ್ಸಾಂ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಸಮೀಕ್ಷೆಗಳು ಹೇಳಿದ್ದು, ಕಾಂಗ್ರೆಸ್ ಗೆ ಮತ್ತೆ ಸೋಲು ಎದುರಾಗಬಹುದು ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಪುದುಚೇರಿ: ಪುದುಚೇರಿಯಲ್ಲಿ ಎನ್ ಆರ್ ಕಾಂಗ್ರೆಸ್-ಬಿಜೆಪಿ ಮೈತ್ರಿಕೂಟ ಗೆಲುವು ಸಾಧಿಸಬಹುದು ಎಂದು ಸಮೀಕ್ಷೆಗಳು ಹೇಳಿದ್ದು, ಈ ಮೂಲಕ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಬಾರಿ ಬಿಜೆಪಿ ಗೆದ್ದಾಂತಾಗುತ್ತದೆ.

ಇನ್ನು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಫಲಿತಾಂಶ ಪ್ರಕಟವಾದ ಬಳಿಕ ಎಲ್ಲಾ ರೀತಿಯ ಸಂಭ್ರಮಾಚರಣೆ ಮೇಲೆ ಚುನಾವಣಾ ಆಯೋಗ ನಿಷೇಧ ಹೇರಿದ್ದು, ಮತ ಎಣಿಕೆ ಕೇಂದ್ರ ಪ್ರವೇಶಿಸುವ ಅಭ್ಯರ್ಥಿಗಳು ಹಾಗೂ ಏಜೆಂಟ್ ಗಳಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ.

ಕರ್ನಾಟಕದ 3 ಕ್ಷೇತ್ರಗಳ ಫಲಿತಾಂಶ

ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.

ಬೆಳಗಾವಿ ಲೋಕಸಭೆ : ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮೃತಪಟ್ಟ ಕಾರಣ ಪತ್ನಿ ಮಂಗಲಾ ಅಂಗಡಿ ಅವರಿಗೆ ಬಿಜೆಪಿ ಅಭ್ಯರ್ಥಿಯಾಗಿದ್ದು, ಶಾಸಕ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬೆಳಗಾವಿ ಲೋಕಸಭಾ ಕ್ಷೇತ್ರವು ಬಿಜೆಪಿಯ ಮುಷ್ಠಿಯಲ್ಲಿದ್ದು, ಕ್ಷೇತ್ರವನ್ನು ಉಳಿಸಿಕೊಳ್ಳುವ ವಿಶ್ವಾಸ ಬಿಜೆಪಿಗೆ ಇದೆ.

ಬಸವಕಲ್ಯಾಣ : ಬಸವಕಲ್ಯಾಣ ಕ್ಷೇತ್ರದಲ್ಲಿ ಶಾಸಕರಾಗಿದ್ದ ನಾರಾಯಣರಾವ್ ಕೋವಿಡ್ ಸೊಂಕಿನಿಂದಾಗಿ ನಿಧನರಾದ ಕಾರಣ ಅವರ ಪತ್ನಿ ಮಾಲಾ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಬಿಜೆಪಿಯಿಂದ ಶರಣು ಸಲಗರ್ ಕಣದಲ್ಲಿದ್ದಾರೆ. ಜೆಡಿಎಸ್ ನಿಂದ ಸೈಯದ್ ಅಲಿ ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖೂಬಾ ಸ್ಪರ್ಧಿಸಿದ್ದಾರೆ.

ಮಸ್ಕಿ : ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಅಭ್ಯರ್ಥಿಗಳೇ ಇದ್ದು, ಪಕ್ಷವನ್ನು ಅದಲು ಬದಲು ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ನಿಂದ ಹೊರಬಂದ ಪ್ರತಾಪ್ ಗೌಡ ಪಾಟೀಲ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸನಗೌಡ ತುರ್ವಿನಾಳ್ ಕಣಕ್ಕಿಳಿದಿದ್ದಾರೆ.

SHARE THIS

Author:

0 التعليقات: