Saturday, 1 May 2021

ಸಾಂತ್ವನ ಕೇಂದ್ರಗಳಿಗೆ ಬೀಗ ಜಡಿದು ಮಾತು ತಪ್ಪಿದ ಸರಕಾರ : ಎಚ್.ಡಿ. ಕುಮಾರಸ್ವಾಮಿ ಆಕ್ರೋಶ

 

ಸಾಂತ್ವನ ಕೇಂದ್ರಗಳಿಗೆ ಬೀಗ ಜಡಿದು ಮಾತು ತಪ್ಪಿದ ಸರಕಾರ : ಎಚ್.ಡಿ. ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು : ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರಕಾರ ಬೀಗ ಜಡಿಯಲ್ಲ ಎಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ಸದ್ದಿಲ್ಲದಂತೆ ಎಲ್ಲ ಜಿಲ್ಲಾ ಮತ್ತು ಕೆಲವು ತಾಲ್ಲೂಕು ಮಟ್ಟದ 71 ಸಾಂತ್ವನ‌ ಕೇಂದ್ರಗಳಿಗೆ ಬೀಗ ಜಡಿಸಿ ಮಾತು ತಪ್ಪಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ. ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುತ್ತಿವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಆರಂಭಗೊಂಡಿದ್ದ ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಿ ಅದೇಶ ಹೊರಡಿಸಿರುವುದು ದೂರು ದುಮ್ಮಾನ ಪರಿಹರಿಸುವವರು ಯಾರು ಎಂಬ ಪ್ರಶ್ನೆ‌ ಎದುರಾಗಿದೆ ಎಂದು ಅವರು ಹೇಳಿದ್ದಾರೆ.

ಸರಕಾರದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆ ಲೈಂಗಿಕ ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ವೈದ್ಯಕೀಯ ಚಿಕಿತ್ಸೆ, ಕಾನೂನು ನೆರವು, ಸಲಹೆ ನೀಡುವ ಉದ್ದೇಶವನ್ನು ಹೊಂದಿದ್ದರೂ ಕರ್ನಾಟಕದಲ್ಲಿ ಅದು ಪೂರ್ಣ ಪ್ರಮಾಣದಲ್ಲಿ ಕಾರ್ಯ ಮಾಡುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲೆಗೆ ಕೇವಲ ಒಂದೇ ಒಂದು ಕೇಂದ್ರ ಇರುವ ಕಾರಣ ಎಲ್ಲರಿಗೂ ಸುಲಭವಾಗಿ ನೆರವು ಸಿಗಲು ಸಾಧ್ಯವಾಗುತ್ತಿಲ್ಲ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಕೌಟುಂಬಿಕ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರ ಕಷ್ಟವನ್ನು ದೇವರೇ ಕಾಪಡಬೇಕಿದೆ. ಈ ಸಮಯದಲ್ಲಿ ಸಾಂತ್ವನ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವುದು ಸೂಕ್ತವಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರೇ ಈ ಕೂಡಲೇ ಅದೇಶ ಹಿಂಪಡೆದು ಸಾಂತ್ವನ ಕೇಂದ್ರಗಳನ್ನು ಮುಂದುವರೆಸಿ. ಶೋಷಿತ ಮಹಿಳೆಯರಿಗೆ ಸಾಂತ್ವನ ಕೇಂದ್ರಗಳು ಆಸರೆಯಾಗಲಿ ಎಂದು ಅವರು ಆಗ್ರಹಿಸಿದ್ದಾರೆ.


SHARE THIS

Author:

0 التعليقات: