Tuesday, 8 June 2021

ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಪುತ್ರ ಸಹಿತ ಮೂವರು ಆರೋಪಿಗಳಿಗೆ ಜೀವಿತಾವಧಿ ಜೈಲು ಶಿಕ್ಷೆ


ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಪುತ್ರ ಸಹಿತ ಮೂವರು ಆರೋಪಿಗಳಿಗೆ ಜೀವಿತಾವಧಿ ಜೈಲು ಶಿಕ್ಷೆ

ಉಡುಪಿ, ಜೂ.8: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉದ್ಯಮಿ, ಉಡುಪಿ ಇಂದ್ರಾಳಿಯ ಭಾಸ್ಕರ್ ಶೆಟ್ಟಿ(52) ಪ್ರಕರಣದ ಆರೋಪಿಗಳಾದ ಭಾಸ್ಕರ್ ರ ಪತ್ನಿ, ಮಗ ಸಹಿತ ಮೂವರು ಆರೋಪಿಗಳಿಗೆ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಇಂದು ಮಧ್ಯಾಹ್ನ ಪ್ರಕಟಿಸಿದ್ದಾರೆ.

ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ಜೀವಿತಾವಧಿ ಜೈಲು ಶಿಕ್ಷೆಗೊಳಗಾದ ಆರೋಪಿಗಳಾಗಿದ್ದಾರೆ.

ಸಾಕ್ಷ್ಯನಾಶ ಆರೋಪಿ ರಾಘವೇಂದ್ರನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ವಾದ ಮಂಡಿಸಿದ್ದಾರೆ.

ಸದ್ಯ ಪ್ರಕರಣದ ಪ್ರಮುಖ ಆರೋಪಿಗಳಾದ ಭಾಸ್ಕರ್ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಲಭಿಸಿದ್ದರೆ, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜೋತಿಷ್ಯ ನಿರಂಜನ್ ಭಟ್ ಬೆಂಗಳೂರು ಜೈಲಿನಲ್ಲಿದ್ದಾರೆ. ಸಾಕ್ಷ್ಯನಾಶ ಆರೋಪಿಗಳಾದ ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್ ವಿಚಾರಣೆ ಮಧ್ಯೆ ಅನಾರೋಗ್ಯದಿಂದ ಮೃತಪಟ್ಟರೆ, ರಾಘವೇಂದ್ರ ಜಾಮೀನು ಪಡೆದುಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ: ಆರೋಪಿಗಳು 2016ರ ಜು.28ರಂದು ಅಪರಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಟ್ಟಿರುವುದು ಪೊಲೀಸ್ ತನಿಖೆಯಲ್ಲಿ ಪತ್ತೆಯಾಗಿತ್ತು. ಜು.31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಕೊಲೆ ಪ್ರಕರಣವನ್ನು ಬಯಲಿಗೆಳೆದಿದ್ದು, ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್ ನನ್ನು ಮತ್ತು ಆ.8ರಂದು ನಿರಂಜನ್ ಭಟ್ ನನ್ನು ಬಂಧಿಸಿದ್ದರು.


SHARE THIS

Author:

0 التعليقات: