ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯ ಇಲ್ಲ: ಸಿದ್ದರಾಮಯ್ಯ
ದಿಲ್ಲಿ ಪ್ರವಾಸದಲ್ಲಿರುವ ಕರ್ನಾಟಕ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಎಐಸಿಸಿ ಕಾರ್ಯದರ್ಶಿ ಮಧು ಯಾಕ್ಷಿಗೌಡ ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದರು.
ಹೊಸದಿಲ್ಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯ ಇಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.
ಹೊಸದಿಲ್ಲಿ ಪ್ರವಾಸದಲ್ಲಿರುವ ಅವರು ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಪಕ್ಷದಲ್ಲಿ ಒಡಕು ಇದೆ ಎಂಬ ಮಾತುಗಳು ಸತ್ಯಕ್ಕೆ ದೂರವಾದುದು ಎಂದರು.
ನಾವೀಗ ಪ್ರತಿಪಕ್ಷದಲ್ಲಿ ಇದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ. ಹೀಗಿರುವಾಗ ಒಡಕಿನ ಮಾತೇಕೆ ಬರುತ್ತದೆ ಎಂದು ಪ್ರಶ್ನಿಸಿದ ಅವರು, ರಾಜ್ಯ ಕಾಂಗ್ರೆಸ್ ಸದ್ಯ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ ಎಂದು ಹೇಳಿದರು.
ರಾಜ್ಯ ಸರಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಈ ಸರಕಾರವನ್ನು ಕಿತ್ತೊಗೆಯಲು ಎಲ್ಲರೂ ಸೇರಿ ಹೋರಾಟ ಮಾಡುತ್ತಿದ್ದೇವೆ.
ಮುಂದಿನ ಮುಖ್ಯಮಂತ್ರಿ ವಿಷಯದ ಬಗ್ಗೆ ಚರ್ಚೆ ಅಪ್ರಸ್ತುತ. ಚುನಾವಣೆ ಬಳಿಕ ಶಾಸಕರ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ವರಿಷ್ಠರ ತೀರ್ಮಾನವೇ ಅಂತಿಮ. ಅವರ ನಿರ್ಧಾರಕ್ಕೆ ಎಲ್ಲರೂ ಬದ್ಧ ಎಂದು ಸಿದ್ದರಾಮಯ್ಯ, ಇಂದು ಸಂಜೆ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದೇನೆ ಎಂದು ತಿಳಿಸಿದರು.
0 التعليقات: