ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ
ಬೆಂಗಳೂರು: ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ರಾಜಭವನದ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು. ಬೊಮ್ಮಾಯಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಬಳಿಕ ನೂತನ ಮುಖ್ಯಮಂತ್ರಿ ಕಡತಕ್ಕೆ ಸಹಿ ಹಾಕಿದರು. ನಂತರ ರಾಜ್ಯಪಾಲರು ಬೊಮ್ಮಾಯಿ ಅವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು.
ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕಾರ್ಯಕ್ರಮ ನಡೆಸಿಕೊಟ್ಟರು.
ನೂತನ ಮುಖ್ಯಮಂತ್ರಿಯನ್ನು ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದಿಸಿದರು.
ಬುಧವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿತ್ತು.
0 التعليقات: