Monday, 6 September 2021

ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಮಹಿಳಾ ವಿರೋಧಿ: ಸಿದ್ದರಾಮಯ್ಯ


 ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಮಹಿಳಾ ವಿರೋಧಿ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದರೂ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಸಾಂತ್ವನ ಕೇಂದ್ರಗಳನ್ನು ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸಲು ಹೊರಟಿರುವ ರಾಜ್ಯ ಸರ್ಕಾರದ ಮಹಿಳಾ ವಿರೋಧಿ ಕ್ರಮವನ್ನು ಖಂಡಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ' ನೊಂದ ಮತ್ತು ತುರ್ತು ಅಗತ್ಯ ಇರುವ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ, ಆರ್ಥಿಕ ನೆರವು, ಶಿಕ್ಷಣ, ಉದ್ಯೋಗ, ಉಚಿತ ಕಾನೂನು ನೆರವು ಸೇರಿದಂತೆ ಹಲವು ರೀತಿಯ ಸಹಾಯ ಒಂದೇ ಸೂರಿನ ಅಡಿಯಲ್ಲಿ ಸಿಗಬೇಕು ಎನ್ನುವ ಕಾಳಜಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಾಂತ್ವನ ಕೇಂದ್ರಗಳನ್ನು ನಿರ್ವಹಿಸಲಾಗುತಿತ್ತು' ಎಂದು ತಿಳಿಸಿದ್ದಾರೆ. 

'ಸ್ವಯಂ ಸೇವಾ ಸಂಸ್ಥೆಗಳ ನೆರವಿನಿಂದ ಈ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದವು. ಸಾಂತ್ವನ ಕೇಂದ್ರಗಳ ಆಪ್ತ ಸಮಾಲೋಚಕರಿಂದ ಇದುವರೆಗೂ ಸಹಸ್ರಾರು ಮಹಿಳೆಯರು ಸಾಂತ್ವನ ಮತ್ತು ಭರವಸೆ ಪಡೆದುಕೊಂಡಿದ್ದಾರೆ. ಈ ಕೇಂದ್ರಗಳು ನೊಂದ ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿ ಆತ್ಮಹತ್ಯೆ, ಖಿನ್ನತೆ ಸೇರಿದಂತೆ ಹಲವು ರೀತಿಯ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುತ್ತಿದ್ದವು' ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈಗ ಕೋವಿಡ್ ನೆಪದಲ್ಲಿ ಆರ್ಥಿಕ ಬಿಕ್ಕಟ್ಟಿನ ಕಾರಣ ಹೇಳಿ 71 ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಲಾಗಿದೆ. ರಾಜಧಾನಿ ಬೆಂಗಳೂರು ಮಹಿಳೆಯರ ಮೇಲೆ ಅತಿ ಹೆಚ್ಚು ದೌರ್ಜನ್ಯ ನಡೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಹೀಗಿದ್ದೂ ಬೆಂಗಳೂರು ನಗರದಲ್ಲಿದ್ದ ಎಲ್ಲಾ ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಿರುವುದು ಅಕ್ಷಮ್ಯ ಎಂದಿದ್ದಾರೆ. 

ಹೀಗಾಗಿ ಬಂದ್ ಆಗಿರುವ ಸಾಂತ್ವನ ಕೇಂದ್ರಗಳನ್ನು ತಕ್ಷಣ ಆರಂಭಿಸಬೇಕು. ಉಳಿದ ಕೇಂದ್ರಗಳನ್ನು ಬಂದ್ ಮಾಡುವ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.


SHARE THIS

Author:

0 التعليقات: