Sunday, 17 October 2021

ಕೇಸರಿ ದಿರಿಸಿನಲ್ಲಿ ಪೊಲೀಸರು; ''ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ'' ಎಂದ ಸಿದ್ದರಾಮಯ್ಯ


 ಕೇಸರಿ ದಿರಿಸಿನಲ್ಲಿ ಪೊಲೀಸರು; ''ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ'' ಎಂದ ಸಿದ್ದರಾಮಯ್ಯ

ಬೆಂಗಳೂರು: ''ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ‌ ಕನಸು ನನಸಾಗಬಹುದು'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಿರುಗೇಟು ನೀಡಿದ್ದಾರೆ. 

ಕೇಸರಿ ದಿರಿಸು ಹೊಂದಿರುವ ಪೊಲೀಸರ ಪೋಟೊಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

''ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ‌ ಪೊಲೀಸ್‌ಗಿರಿಯ ದೌರ್ಜನ್ಯ.... ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ... ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ.... ಇದಕ್ಕೆಲ್ಲ ಮುಖ್ಯಮಂತ್ರಿಗಲು ಬಹಿರಂಗ ಬೆಂಬಲ.. ರಾಜ್ಯದಲ್ಲಿ ಸರ್ಕಾರ ಇದೆಯೇ?'' ಎಂದು ಪ್ರಶ್ನಿಸಿದ್ದಾರೆ. 

''ಗೂಂಡಾಗಿರಿಯನ್ನು 'ಕ್ರಿಯೆಗೆ ಪ್ರತಿಕ್ರಿಯೆ' ಎಂದು ಸಮರ್ಥಿಸಿದ ಸಿಎಂ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ‌ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ'' ಎಂದಿದ್ದಾರೆ. 

''ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಆದಿತ್ಯನಾಥ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ. ಬೊಮ್ಮಾಯಿ ಅವರೇ, ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ'' ಎಂದು ತಿಳಿಸಿದ್ದಾರೆ. 


SHARE THIS

Author:

0 التعليقات: