ಉತ್ತರಪ್ರದೇಶ:ಪ್ರತಿಭಟನಾನಿರತ ರೈತರ ಮೇಲೆ ಕಾರು ಚಲಾಯಿಸಿದ ಕೇಂದ್ರ ಸಚಿವರ ಪುತ್ರ; ಇಬ್ಬರು ಬಲಿ
ಲಕ್ನೊ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರವಿವಾರ ಪ್ರತಿಭಟನಾ ನಿರತ ರೈತರ ಮೇಲೆ ತನ್ನ ಕಾರನ್ನು ಹರಿಸಿರುವ ಆರೋಪಕ್ಕೆ ಒಳಗಾಗಿದ್ದು, ಘಟನೆಯಿಂದಾಗಿ ಇಬ್ಬರು ರೈತರು ಸಾವನ್ನಪ್ಪಿದ್ದಾರೆ. ಈ ಘಟನೆಯು ಭಾರೀ ಆಕ್ರೋಶಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆಂದು India Today ವರದಿ ಮಾಡಿದೆ.
ಲಖಿಂಪುರ್ ಖೇರಿಯ ಟಿಕುನಿಯಾದಲ್ಲಿ ಅಜಯ್ ಮಿಶ್ರಾ ಅವರ ತಂದೆಯ ಗ್ರಾಮದಲ್ಲಿ ನಡೆದ ಕಾರ್ಯಕ್ರಮಕ್ಕೆ ಮೊದಲು ಕೇಂದ್ರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಪ್ರತಿಭಟಿಸುತ್ತಿದ್ದರು. ಈ ಕಾರ್ಯಕ್ರಮಕ್ಕೆ ಉತ್ತರಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಮುಖ್ಯ ಅತಿಥಿಯಾಗಿದ್ದರು. ರೈತರು ಉಪ ಮುಖ್ಯಮಂತ್ರಿಗೆ ಕಪ್ಪು ಬಾವುಟಗಳನ್ನು ತೋರಿಸಲು ಯೋಜಿಸಿದ್ದರು.
ಆಶೀಶ್ ಮಿಶ್ರಾ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರನ್ನು ಬರಮಾಡಿಕೊಳ್ಳಲು ಹೋದಾಗ ಅವರ ಕಾರಿನ ಮುಂದೆ ರೈತರು ಪ್ರತಿಭಟನೆ ನಡೆಸಿದರು. ಆಗ ಕೇಂದ್ರ ಸಚಿವರ ಮಗ ಪ್ರತಿಭಟನಾ ನಿರತ ರೈತರ ಮೇಲೆ ತನ್ನ ಕಾರನ್ನು ಚಲಾಯಿಸಿದನೆಂದು ಆರೋಪಿಸಲಾಗಿದೆ. ಘಟನೆಯಲ್ಲಿ ಇಬ್ಬರಲ್ಲ, ಮೂವರು ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಆರೋಪಿಸಿದೆ.
ಕಾರನ್ನು ಸುಟ್ಟ ರೈತರು:
ತರುವಾಯ ಕೋಪಗೊಂಡ ರೈತರು ಆಶಿಶ್ ಮಿಶ್ರಾ ಅವರ ಮೂರು ಕಾರುಗಳನ್ನು ಸುಟ್ಟುಹಾಕಿದರು. ಇತ್ತೀಚಿನ ವರದಿಗಳ ಪ್ರಕಾರ, ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ ಹಾಗೂ ಟಿಕುನಿಯಾದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸ್ ಅಧಿಕಾರಿ ಪ್ರಶಾಂತ್ ಕುಮಾರ್ ಗೆ ಲಖಿಂಪುರ್ ಖೇರಿ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸೂಚಿಸಿದ್ದಾರೆ ಎನ್ನಲಾಗಿದೆ.
0 التعليقات: