ಜಮ್ಮು ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತ: ಮೃತಪಟ್ಟವರ ಸಂಖ್ಯೆ 12ಕ್ಕೇರಿಕೆ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋದೇವಿ ದೇಗುಲದಲ್ಲಿ ಶನಿವಾರ ಮುಂಜಾನೆ ನೂಕುನುಗ್ಗಲು ಉಂಟಾಗಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಖೆ 12 ಕ್ಕೇರಿದ್ದು, ಹನ್ನೆರಡು ಮಂದಿ ಗಾಯಗೊಂಡಿದ್ದಾರೆ.
ಭಕ್ತಾದಿಗಳ ನೂಕುನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದುರಂತ ಪರಿಸ್ಥಿತಿಯನ್ನು "ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ" ಎಂದು ಅವರ ಕಚೇರಿಯ ಸಚಿವರೊಬ್ಬರು ತಿಳಿಸಿದ್ದಾರೆ.
ಕಾಲ್ತುಳಿತದಲ್ಲಿ 12 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಹಾಗೂ ಕನಿಷ್ಠ 14 ಮಂದಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಥವಾ ಎಡಿಜಿಪಿ ಮುಖೇಶ್ ಸಿಂಗ್ ಖಚಿತಪಡಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ತ್ರಿಕೂಟ ಬೆಟ್ಟದ ಗರ್ಭಗುಡಿಯ ಹೊರಭಾಗದಲ್ಲಿ ಈ ಘಟನೆ ನಡೆದಿದೆ. ಕಾಲ್ತುಳಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
ಹೊಸ ವರ್ಷದ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ವೈಷ್ಣೋದೇವಿ ಭವನವನ್ನು ಪ್ರವೇಶಿಸಿದಾಗ ನೂಕುನುಗ್ಗಲು ಉಂಟಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯವು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ಮೊತ್ತವನ್ನು ಘೋಷಿಸಿತು. ಮಾತಾ ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತದಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಈ ಮೊತ್ತವನ್ನು ನೀಡಲಾಗುವುದು. ಗಾಯಾಳುಗಳಿಗೆ ರೂ. 50,000 ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.
10 ಲಕ್ಷ ರೂ.ಪರಿಹಾರ ಘೋಷಿಸಿದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ
“ವೈಷ್ಣೋದೇವಿ ದೇಗುಲದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ತಲಾ 10 ಲಕ್ಷ ರೂಪಾಯಿಗಳನ್ನು ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ದೇಗುಲದ ಆಡಳಿತ ಮಂಡಳಿ ಭರಿಸಲಿದೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
0 التعليقات: