Sunday, 12 December 2021

ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಿ.ಎಂ.ಇಬ್ರಾಹೀಂ


 ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಿ.ಎಂ.ಇಬ್ರಾಹೀಂ

ಬೆಂಗಳೂರು: ಹಲವು ದಿನಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಚಟುವಟಿಕೆಗಳಿಂದ ದೂರ ಉಳಿದಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹೀಂ ಅವರು, ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ರವಿವಾರ ಇಲ್ಲಿನ ಶಿವಾನಂದ ವೃತ್ತದ ಸಮೀಪದಲ್ಲಿ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿ ಇಬ್ರಾಹೀಂ, ಸುಮಾರು 20 ನಿಮಿಷಗಳಿಗೂ ಹೆಚ್ಚು ಕಾಲ ಚರ್ಚಿಸಿದರು. ಇತ್ತೀಚೆಗೆ ಜೆಡಿಎಸ್ ನಾಯಕರನ್ನು ಭೇಟಿ ಮಾಡಿದ್ದ ಇಬ್ರಾಹೀಂ, ಕಾಂಗ್ರೆಸ್ ಪಕ್ಷ ತೊರೆಯಲಿದ್ದಾರೆ ಎಂಬ ವದಂತಿಗಳಿವೆ. ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.

ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂಬ ಇಬ್ರಾಹೀಂ ಅಸಮಾಧಾನ ಹೊರಹಾಕಿದ್ದರು. ಅಲ್ಲದೆ, ಪರಿಷತ್ ಚುನಾವಣೆಯ ಪ್ರಚಾರ ಕಣದಿಂದ ದೂರ ಉಳಿದಿದ್ದರು. ಅಲ್ಲದೆ, ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಇಬ್ರಾಹಿಂ ಕಾಂಗ್ರೆಸ್‍ನಲ್ಲೇ ಇದ್ದು ಪಕ್ಷಕ್ಕೆ ಮುಜುಗರ ಮಾಡುವ ನಡವಳಿಕೆಗಳನ್ನು ತೋರಿಸುತ್ತಿರುವುದು ಹಲವರ ಅಸಮಾಧಾನಕ್ಕೂ ಕಾರಣವಾಗಿತ್ತು.

ಕಾಂಗ್ರೆಸ್ ಪಕ್ಷ ತೊರೆಯುವ ಕುರಿತು ಚರ್ಚೆ ನಡೆದಿದ್ದು, ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಸಿಎಂ ಇಬ್ರಾಹೀಂ ಭೇಟಿ ಬಳಿಕ ಕಾಂಗ್ರೆಸ್‍ನ ಹಿರಿಯ ನಾಯಕ ಅಲ್ಲಂ ವೀರಭದ್ರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.


SHARE THIS

Author:

0 التعليقات: