Tuesday, 8 February 2022

ಹಿಜಾಬ್, ಕೇಸರಿ ಸಂಘರ್ಷ; ಶಿವಮೊಗ್ಗದಲ್ಲಿ 2 ದಿನ ನಿಷೇಧಾಜ್ಞೆ ಜಾರಿ

ಹಿಜಾಬ್, ಕೇಸರಿ ಸಂಘರ್ಷ; ಶಿವಮೊಗ್ಗದಲ್ಲಿ 2 ದಿನ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಇಂದು ಮತ್ತು ನಾಳೆ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಿ ತಹಶೀಲ್ದಾರ ನಾಗರಾಜ್ ಆದೇಶಿಸಿದ್ದಾರೆ.

ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಟನೆಯನ್ನು ವಿದ್ಯಾರ್ಥಿಗಳು ನಡೆಸುತ್ತಿದ್ದರು.

ಕಾಲೇಜಿನ ಧ್ವಜಸ್ತಂಭವನ್ನು ಹತ್ತಿ ಕೇಸರಿ ಧ್ವಜವನ್ನು ಹಾರಿಸಿದ್ದರು. ಕಾಲೇಜಿನಲ್ಲಿ ಕಲ್ಲು ತೂರಾಟ, ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಹಿಜಾಬ್ ವಿರೋಧಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟನೆಗೆ ಇಳಿದಿದ್ದರು. ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಧರಣಿ, ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಸಿದ್ದರು. ಅಲ್ಲದೇ ಕಾಲೇಜಿನ ಆವರಣದಲ್ಲಿದ್ದ ಧ್ವಜ ಸ್ತಂಭವೇರಿ ಕೇಸರಿ ಧ್ವಜವನ್ನು ಹಾರಿಸಿದ್ದಾರೆ.

ಈ ಬಳಿಕ ಲಘು ಲಾಠಿ ಚಾರ್ಜ್ ಕೂಡ ಮಾಡಲಾಗಿತ್ತು. ಸ್ವತಃ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದರು. ಈ ನಡುವೆಯೂ ಪೊಲೀಸರ ಮೇಲೆ ಕಲ್ಲು ತೂರಾಟ, ಕಾಲೇಜು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.

ಈ ಎಲ್ಲಾ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರ ನಾಗರಾಜ್ ಅವರು ಶಿವಮೊಗ್ಗದಾದ್ಯಂತ 144 ಸೆಕ್ಷನ್ ಅಡಿಯಲ್ಲಿ ದಿನಾಂಕ 08-02-2022ರ ಇಂದು ಮತ್ತು ದಿನಾಂಕ 09-02-2022ರಂದು 2 ದಿನ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

ಸಚಿವರ ಪ್ರತಿಕ್ರಿಯೆ "ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ನಡೆದ‌ ಘಟನೆ ಸಂಬಂಧ ಜಿಲ್ಲಾಡಳಿತದ ಜೊತೆ ಚರ್ಚಿಸಿ ಮಾಹಿತಿ ಪಡೆದಿದ್ದೇನೆ. ಕಾನೂನಿನಂತೆ ಎಲ್ಲರೂ ನಡೆದುಕೊಳ್ಳಬೇಕು. ಕಾನೂನು ಸುವ್ಯವಸ್ಥೆ ಧಕ್ಕೆಯಾಗದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದೇನೆ. ಡಿಸಿ, ಎಸ್‌ಪಿ ಹಾಗೂ ಸ್ಥಳೀಯ ಶಾಸಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ‌" ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ.


SHARE THIS

Author:

0 التعليقات: