ವಾಯುಭಾರ ಕುಸಿತ: ಮುಂದಿನ ಎರಡು ದಿನ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ಸಾಧ್ಯತೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಾ.7ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಮಾ.8ರಂದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಳೆಯಾಗುವ (Rain) ಸಾಧ್ಯತೆಯಿದೆ.
ಮಾ.7ರಂದು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಾಗೂ ಪಶ್ಚಿಮ ಘಟ್ಟದ ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆ ಇದೆ. ಮಾರ್ಚ್ 8ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ ಸುರಿಯುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿಲ್ಲ. ಆದರೆ ನಗರದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಲವಾಗಿ ಮೇಲ್ಮೈ ಗಾಳಿ ಬೀಸಲಿದೆ. ಬೆಳಗಿನ ವೇಳೆ ಮಂಜು ಮುಸುಕಿದ ವಾತಾವರಣ ಇರಲಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣಹವೆ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
0 التعليقات: